ತುಂಗಾವಾಣಿ.
ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಪದವಿ ಮುಗಿಸಿ ವರ್ಷಗಳು ಕಳೆದರೂ ವಿದ್ಯಾರ್ಥಿಗಳಿಗೆ ಇದುವರೆಗೂ ಮೂಲ ಅಂಕಪಟ್ಟಿಗಳನ್ನು ವಿತರಿಸದಿರುವುದನ್ನು ಖಂಡಿಸಿ, ಭಾರತ ವಿದ್ಯಾರ್ಥಿ ಫೆಡರೇಷನ್ (SFI) ಜಿಲ್ಲಾ ಸಮಿತಿ ವತಿಯಿಂದ ಗುರುವಾರ ತಹಶೀಲ್ದಾರ್ ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಯು., "ಕೊಪ್ಪಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ವಿವಿಧ ಪದವಿ ಕಾಲೇಜುಗಳಲ್ಲಿ 2023–24, 2024–25 ಹಾಗೂ 2025–26ನೇ ಶೈಕ್ಷಣಿಕ ಸಾಲುಗಳಲ್ಲಿ ಬಿ.ಎಸ್ಸಿ, ಬಿ.ಎ, ಬಿ.ಕಾಂ, ಬಿಬಿಎ ಹಾಗೂ ಬಿ.ಎಡ್ ಸೇರಿದಂತೆ ವಿವಿಧ ಪದವಿ ಕೋರ್ಸ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿರುವ ಸಾವಿರಾರು ವಿದ್ಯಾರ್ಥಿಗಳಿಗೆ ಇದುವರೆಗೆ ಮೂಲ ಅಂಕಪಟ್ಟಿಗಳನ್ನು ವಿತರಿಸಲಾಗಿಲ್ಲ. ಇದರಿಂದ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ," ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಉದ್ಯೋಗ, ಉನ್ನತ ಶಿಕ್ಷಣಕ್ಕೆ ಕಂಟಕ:
"ಪದವಿ ಮುಗಿದರೂ ಅಂಕಪಟ್ಟಿ ಕೈಸೇರದ ಕಾರಣ ಸ್ನಾತಕೋತ್ತರ ಪದವಿ ಪ್ರವೇಶ ಪಡೆಯಲು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಸರ್ಕಾರಿ-ಖಾಸಗಿ ಉದ್ಯೋಗಾವಕಾಶಗಳಿಂದ ವಿದ್ಯಾರ್ಥಿಗಳು ವಂಚಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ವಿವಿ ಆಡಳಿತ ಮಂಡಳಿಯ ನಿರ್ಲಕ್ಷ್ಯ ಖಂಡನೀಯ. ಕುಲಾಧಿಪತಿಗಳಾದ ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶಿಸಿ, ಉನ್ನತ ಶಿಕ್ಷಣ ಇಲಾಖೆ ಹಾಗೂ ವಿವಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಕಾಲಮಿತಿಯೊಳಗೆ ಅಂಕಪಟ್ಟಿಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕು," ಎಂದು ಆಗ್ರಹಿಸಿದರು.
ಪ್ರಮುಖ ಬೇಡಿಕೆಗಳು:
ಬಾಕಿ ಉಳಿದಿರುವ 3 ಶೈಕ್ಷಣಿಕ ಸಾಲುಗಳ ಮೂಲ ಅಂಕಪಟ್ಟಿಗಳನ್ನು ತಕ್ಷಣ ವಿತರಿಸಬೇಕು.
ವಿಳಂಬಕ್ಕೆ ಕಾರಣರಾದವರ ವಿರುದ್ಧ ತನಿಖೆ ನಡೆಸಿ ಹೊಣೆಗಾರಿಕೆ ನಿಗದಿಪಡಿಸಬೇಕು.
ಅಂಕಪಟ್ಟಿ ವಿತರಣೆಗೆ ನಿರ್ದಿಷ್ಟ ಕಾಲಮಿತಿ ಪ್ರಕಟಿಸಬೇಕು.
ಸಮಸ್ಯೆ ಇತ್ಯರ್ಥವಾಗುವವರೆಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗಕ್ಕೆ ಪೂರಕವಾದ ಅಧಿಕೃತ ತಾತ್ಕಾಲಿಕ ದಾಖಲೆಗಳನ್ನು ಒದಗಿಸಬೇಕು.
ತಾಲೂಕು ಆಡಳಿತ ಕಚೇರಿಯಲ್ಲಿ ಉಪ ತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣೂರು ಅವರು ಮನವಿ ಪತ್ರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿಗಳಾದ ಹನುಮೇಶ್, ಆಕಾಶ್ ಹಾಗೂ ವಿದ್ಯಾರ್ಥಿ ಮುಖಂಡರಾದ ಸಂಕೇತ್, ಸಾಯಿ ಕೃಷ್ಣ, ರೋಹಿತ್, ಪ್ರಶಾಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ನೈಜ ಸುದ್ದಿಗಾಗಿ ತುಂಗಾವಾಣಿ ಓದಿರಿ.